ಇತ್ತೀಚಿಗೆ ದುಬೈನಲ್ಲಿ ಏಷ್ಯಾ ಕಪ್ ಟಿ20 ಟೂರ್ನಿಯ ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಅಲಂಕರಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿದ ಭಾರತ ಪ್ರಶಸ್ತಿಗೆ ಮುತ್ತಿಟ್ಟಿದೆ. ಈ ಸರಣಿ ಮುಗಿದ ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾ ಮತ್ತೊಂದು ಸರಣಿಗೆ ಸಜ್ಜಾಗುತ್ತಿದೆ. ಭಾರತ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಸಜ್ಜಾಗಿದೆ. ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಟೂರ್ನಿಯ ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ಅಕ್ಟೋಬರ್ 2 ರಂದು ನಡೆಯಲಿದೆ.
ವೆಸ್ಟ್ ಇಂಡೀಸ್ ಸರಣಿಗೆ ಈಗಾಗಲೇ ತಂಡವನ್ನು ಪ್ರಕಟಿಸಿದ್ದು, ಅನುಭವಿ ಆಟಗಾರ ರವೀಂದ್ರ ಜಡೇಜಾ ಅವರಿಗೆ ಉಪನಾಯಕ ಜವಾಬ್ದಾರಿ ನೀಡಲಾಗಿದೆ. ಇನ್ನು ಈ ಬಾರಿ ವಿಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದಾಗಿದೆ. ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಗಾಯಕ್ಕೆ ತುತ್ತಾಗಿದ್ದರಿಂದ ಇವರ ಬದಲಿಗೆ ಧ್ರುವ್ ಜುರೇಲ್ ಅವರಿಗೆ ಸ್ಥಾನ ನೀಡಲಾಗಿದೆ. ಇವರು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಕಣಕ್ಕೆ ಇಳಿಯಲಿದ್ದಾರೆ.

ಆರಂಭಿಕರಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕರ್ನಾಟಕದ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಅವರೇ ಕಣಕ್ಕೆ ಇಳಿಯಬಹುದು. ಇನ್ನು ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ದೇವದತ್ ಪಡಿಕ್ಕಲ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಸಾಯಿ ಸುದರ್ಶನ್ ಅವರ ಮೇಲೆ ಟೀಮ್ ಮ್ಯಾನೇಜ್ಮೆಂಟ್ ಭರವಸೆ ಇಟ್ಟು ತವರಿನಲ್ಲಿ ಇವರಿಗೆ ಆಡುವ ಅವಕಾಶವನ್ನು ನೀಡುವ ಸಾಧ್ಯತೆ ಇದೆ.
ಇಂಗ್ಲೆಂಡ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವುದು ಕನ್ಫರ್ಮ್. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್. ಇನ್ನು ಉಪನಾಯಕನ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ರವೀಂದ್ರ ಜಡೇಜಾ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಪಕ್ಕಾ ಆದಂತೆ ಆಗಿದೆ. ಭಾರತದ ಪಿಚ್‌ಗಳು ಸ್ಪಿನ್ ಬೌಲರ್‌ಗಳಿಗೆ ನೆರವಾಗುವುದರಿಂದ ಅಕ್ಷರ್ ಪಟೇಲ್ ಅವರಿಗೂ ಅವಕಾಶ ಸಿಗುವ ಸಾಧ್ಯತೆ ಇದೆ. ಇನ್ನು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿಯನ್ನು ನೀಡುವ ಸಾಧ್ಯತೆ ಇದೆ. ವೇಗದ ಬೌಲರ್ ರೂಪದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ಕನ್ನಡಿಗ ಪ್ರಸಿದ್ಧ ಕೃಷ್ಣ ಅವರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದಾಗಿದೆ.
ಈ ಸರಣಿಯಲ್ಲಿ ಜಯ ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸಿನಲ್ಲಿ ಶುಭಮನ್ ಗಿಲ್ ಪಡೆ ಇದೆ. ಸದ್ಯ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.