
ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಪ್ಲೇ ಆಫ್ ಹಂತದ ಸನಿಹಕ್ಕೆ ಬಂದಿದ್ದು, ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಸುತ್ತಿನ ಪ್ರವೇಶವನ್ನು ಖಚಿತಪಡಿಸಿಕೊಂಡಿವೆ. ಇನ್ನುಳಿದಂತೆ ಕೋಲ್ಕತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಾಲ್ಕನೇ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ.
ಇನ್ನು ಈ ಬಾರಿಯ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿತು. ಇದರ ಬೆನ್ನಲ್ಲೇ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ತಲುಪುವುದರ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಟೂರ್ನಿ ಆರಂಭವಾದಾಗಿನಿಂದಲೂ ಈ ಎರಡೂ ತಂಡಗಳು ಸಾಲುಸಾಲು ಪಂದ್ಯಗಳಲ್ಲಿ ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನಗಳನ್ನು ಪಡೆದುಕೊಂಡಿವೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಸಹ ತಲಾ 12 ಪಂದ್ಯಗಳಲ್ಲಿ ಸೆಣಸಾಡಿದ್ದು, ತಲಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ ಮತ್ತು ತಲಾ 3 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 18 ಅಂಕಗಳನ್ನು ಪಡೆದುಕೊಂಡಿವೆ. ಎರಡೂ ತಂಡಗಳು ಸಹ ಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೆಟ್ ರನ್ ರೇಟ್ ಅಧಿಕವಾಗಿರುವ ಕಾರಣದಿಂದಾಗಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಹೀಗೆ ಟೂರ್ನಿಯಲ್ಲಿ ಸಮಬಲವನ್ನು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ( ಅಕ್ಟೋಬರ್ 4 ) ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸೆಣಸಾಟ ನಡೆಸಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಗ್ರ ಸ್ಥಾನವನ್ನು ಪಡೆದುಕೊಳ್ಳಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಎದುರಾಳಿಯನ್ನು ಸೋಲಿಸಿ ಅಗ್ರಸ್ಥಾನವನ್ನು ಉಳಿಸಿಕೊಳ್ಳುತ್ತಾ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸದೆಬಡಿದು ಅಗ್ರ ಸ್ಥಾನಕ್ಕೇರುತ್ತಾ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇನ್ನು ಇತ್ತಂಡಗಳ ನಡುವೆ ಇದುವರೆಗೂ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಬಲಿಷ್ಠ ತಂಡ ಎನಿಸಿಕೊಂಡಿದೆ ಎಂಬುದರ ಕುರಿತ ಮಾಹಿತಿ ಮುಂದೆ ಇದೆ ಓದಿ..
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಹೀಗೆ ಇತ್ತಂಡಗಳ ನಡುವಿನ ಐಪಿಎಲ್ ಒಟ್ಟಾರೆ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳಲ್ಲಿ ಯಾರು ಬಲಿಷ್ಠರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗೆ ಇತ್ತಂಡಗಳ ಕೊನೆಯ 5 ಪಂದ್ಯಗಳ ಸೆಣಸಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುನ್ನಡೆಯನ್ನು ಸಾಧಿಸಿದೆ.
ದುಬೈ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆದ್ದವರಾರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವನ್ನು ಸಾಧಿಸಿದೆ.
ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದವರು ಯಾರು?
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಮೊದಲ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವನ್ನು ಸಾಧಿಸಿತ್ತು.