
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತ ಹಾಗೂ ಇಂಗ್ಲೆಂಡ್ ಎರಡೂ ತಂಡಗಳ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದೊಡ್ಡ ದಾಖಲೆಯೊಂದನ್ನು ಬರೆಯಲು ಸಜ್ಜಾಗಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ 3000 ರನ್‌ಗಳ ಮೈಲಿಗಲ್ಲನ್ನು ತಲುಪುವ ಸನಿಹದಲ್ಲಿದ್ದಾರೆ ವಿರಾಟ್ ಕೊಹ್ಲಿ. ಈ ದಾಖಲೆಗಾಗಿ ಕೊಹ್ಲಿ ಕೇವಲ 72 ರನ್‌ಗಳನ್ನು ಗಳಿಸಿದರಷ್ಟೇ ಸಾಕು. ಈ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3000 ರನ್‌ಗಳಿಸಿದ ಮೊದಲ ಆಟಗಾರ ಎನಿಸಲಿದ್ದಾರೆ.
32ರ ಹರೆಯದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ಅತ್ಯಂತ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. 85 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿರುವ ಕೊಹ್ಲಿ 2928 ರನ್‌ಗಳಿಸಿದ್ದಾರೆ.
79 ಇನ್ನಿಂಗ್ಸ್‌ಗಳಲ್ಲಿ ಆಡಿರುವ ವಿರಾಟ್ ಕೊಹ್ಲಿ 50.48ರ ಸರಾಸರಿಯಲ್ಲಿ 138.43ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. ಇದರಲ್ಲಿ 25 ಅರ್ಧ ಶತಕಗಳು ಸೇರಿಕೊಂಡಿದೆ. ಡೇವಿಡ್ ಮಲನ್ ಬಳಿಕ ವಿರಾಟ್ ಕೊಹ್ಲಿ ಅತ್ಯಂತ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ ಆಟಗಾರ(ಕನಿಷ್ಟ 800 ರನ್) ಎನಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂತರದ ಸ್ಥಾನದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆಟಗಾರ ಮಾರ್ಟಿನ್ ಗಪ್ಟಿಲ್ ಇದ್ದಾರೆ. ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಆಡಲಿರುವ ಕಾರಣ ಕೊಹ್ಲಿ ಈ ಸರಣಿಯಲ್ಲಿ ಸುಲಭವಾಗಿ ಈ ಮೇಲಿಗಲ್ಲನ್ನು ತಲುಪಲಿದ್ದಾರೆ.