ಭರ್ಜರಿ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಐಸಿಸಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ವರ್ಷದ ಆರಂಭದಲ್ಲಿ ಬಿಡುಗಡೆ ಆದ ಐಸಿಸಿ ಏಕದಿನ ಬ್ಯಾಟಿಂಗ್ ರ್ಯಾಂಕಿಗ್‌ನಲ್ಲಿ ವಿರಾಟ್ ಅಗ್ರ ಸ್ಥಾನವನನ್ನು ಪಡೆದಿದ್ದಾರೆ. ಇವರು ಐದನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ. ಇವರಿಗಿಂತಲೂ ಮೊದಲು ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಕುಸಿತ ಕಂಡಿದ್ದಾರೆ.
ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 93 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಶ್ರೇಯಾಂಕದಲ್ಲಿ ಒಂದು ಸ್ಥಾನ ಏರಿಕೆ ಕಂಡಿದ್ದಾರೆ. ಇವರು 785 ರೇಟಿಂಗ್ ಪಾಯಿಂಗ್‌ಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಪರ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಡೇರಿಲ್ ಮಿಚೆಲ್ ಸ್ಥಾನದಲ್ಲಿ ಏರಿಕೆ ಆಗಿದೆ. ಇವರು 784 ರೇಟಿಂಗ್ ಪಾಯಿಂಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನದಲ್ಲಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ, ಎರಡು ಸ್ಥಾನ ಕುಸಿತ ಕಂಡು ಮೂರನೇ ಸ್ಥಾನ ತಲುಪಿದ್ದಾರೆ. ಇವರು 775 ಅಂಕವನ್ನು ಹೊಂದಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಅಫ್ಘಾನಿಸ್ತಾನ ತಂಡದ ಇಬ್ರಾಹಿಂ ಜರ್ದಾನ್ ಇದ್ದು, ಐದನೇ ಸ್ಥಾನದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ಇದ್ದಾರೆ.
ಟೀಮ್ ಇಂಡಿಯಾ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ 682 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ 654 ಅಂಕಗಳೊಂದಿಗೆ 11ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಟೀಮ್ ಇಂಡಿಯಾದ 4 ಜನ ಆಟಗಾರರು ಟಾಪ್ 10ರಲ್ಲಿ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನ ತಂಡದ ಸ್ಪಿನ್ ಬೌಲರ್ ರಶೀದ್ ಖಾನ್ 710 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಬೌಲರ್‌ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಹೊಂದಿದ್ದಾರೆ. ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಎರಡನೇ ಸ್ಥಾನವನ್ನು, ಟೀಮ್ ಇಂಡಿಯಾದ ಚೈನಾ ಮನ್ ಬೌಲರ್ ಕುಲ್‌ದೀಪ್ ಯಾದವ್ 649 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಉಳಿದಂತೆ ಯಾವೊಬ್ಬ ಭಾರತೀಯ ಬೌಲರ್ ಟಾಪ್ 10ರಲ್ಲಿ ಇಲ್ಲ. ಮೊಹಮ್ಮದ್ ಸಿರಾಜ್ 5 ಸ್ಥಾನ ಏರಿಕೆ ಕಂಡಿದ್ದು 16ನೇ ಶ್ರೇಯಾಂಕದಲ್ಲಿ ಇದ್ದಾರೆ.
ಟೆಸ್ಟ್ ಶ್ರೇಯಾಂಕದಲ್ಲಿ ಭಾರತದ ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್ ಗಿಲ್ ಕ್ರಮವಾಗಿ 8 ಹಾಗೂ 10ನೇ ಸ್ಥಾನದಲ್ಲಿದ್ದಾರೆ. ಟಿ20 ಶ್ರೇಯಾಂಕದಲ್ಲಿ ಅಭಿಷೇಕ್ ಶರ್ಮಾ 908 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ತಂಡದ ಫಿಲ್ ಸಾಲ್ಟ್ 849 ಅಂಕಗಳೊಂದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ತಿಲಕ್ ವರ್ಮಾ ಮೂರನೇ ಶ್ರೇಯಾಂಕದಲ್ಲಿದ್ದಾರೆ. ಭಾರತ ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನ, ಟಿ20 ಶ್ರೇಯಾಂಕದಲ್ಲಿ ವರುಣ್ ಚಕ್ರವರ್ತಿ ನಂಬರ್ 1 ಬೌಲರ್ ಆಗಿದ್ದಾರೆ.