ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ತಪ್ಪಿಸುವ ಉದ್ದೇಶದಿಂದ ಭಾರತ ತಂಡ ಮೂರನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದಾಗಿ 12 ವರ್ಷಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದು ಐತಿಹಾಸಿ ಗೆಲುವು ಸಾಧಿಸಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯದಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿಯುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಮಾಹಿತಿ ನೀಡಿದ್ದಾರೆ.

ಬುಧವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯರ್, ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಯಾವುದೇ ಹೆಚ್ಚುವರಿ ಆಟಗಾರರನ್ನು ಸೇರಿಸಿಕೊಂಡಿಲ್ಲ. ಇದಲ್ಲದೆ, ನವೆಂಬರ್‌ನಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಟೆಸ್ಟ್‌ಗಳ ಸರಣಿಯ ಮೊದಲು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಯಾವುದೇ ಯೋಜನೆ ಇಲ್ಲ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಬುಮ್ರಾ ಆಡಲಿದ್ದಾರೆ ಎಂದು ಅಭಿಷೇಕ್ ನಾಯರ್ ಸ್ಪಷ್ಟಪಡಿಸಿದ್ದಾರೆ.
ವರದಿಗಳ ಪ್ರಕಾರ, ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು ಅಭ್ಯಾಸ ಶಿಬಿರಕ್ಕೆ ಕರೆದಿದೆ. ಆಸ್ಟ್ರೇಲಿಯಾ ಪ್ರವಾಸಕ್ಕೆಆಯ್ಕೆಯಾಗಿರುವ ಭಾರತ ತಂಡದಲ್ಲಿ ಹರ್ಷಿತ್ ರಾಣಾ ಕೂಡ ಸ್ಥಾನ ಪಡೆದಿದ್ದಾರೆ. ಪುಣೆ ಟೆಸ್ಟ್ ಪಂದ್ಯಕ್ಕೂ ಮುನ್ನ ವಾಷಿಂಗ್ಟನ್ ಸುಂದರ್ ಅವರನ್ನು ಕರೆಸಿದಂತೆಯೇ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಯಾವುದೇ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿಲ್ಲ ಎಂದು ಅಭಿಷೇಕ್ ನಾಯರ್ ತಿಳಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ ಬುಮ್ರಾ ಸುಮಾರು 20 ರಿಂದ 25 ಓವರ್‌ಗಳನ್ನು ಬೌಲಿಂಗ್ ಮಾಡಿದ್ದಾರೆ. ಆದ್ದರಿಂದಲೇ ಅವರು ಹೆಚ್ಚು ಬೌಲಿಂಗ್ ಮಾಡಿಲ್ಲ. ಅವರ ಕೆಲಸದ ಹೊರೆ ಬಗ್ಗೆ ಯಾವಾಗಲೂ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಅಲ್ಲದೆ, ನಾವು ಎರಡು ಪಂದ್ಯಗಳನ್ನು ಆಡಿದ್ದೇವೆ. ಈ ಎರಡು ಟೆಸ್ಟ್ ಪಂದ್ಯಗಳಲ್ಲಿ ನಾವು 5 ದಿನಗಳ ವರೆಗೆ ಆಡಲು ಸಾಧ್ಯವಾಗಲಿಲ್ಲ. ಮೂರು, ಮೂರೂವರೆ ದಿನಗಳಲ್ಲಿ ಪಂದ್ಯಗಳು ಮುಗಿದಿವೆ. ಆದರೆ ಬುಮ್ರಾ ನಮಗೆ ಬಹಳ ಮುಖ್ಯ. ಅವರ ಕೆಲಸದ ಹೊರೆ ಯಾವಾಗಲೂ ನಮ್ಮ ಮನಸ್ಸಿನಲ್ಲಿರುತ್ತದೆ ಎಂದು ಅಭಿಷೇಕ್ ಹೇಳಿದ್ದಾರೆ.