ವಿಶ್ವಕಪ್ ಟೂರ್ನಿ ಆರಂಭವಾಗಿದ್ದು ಐದನೇ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಈ ಮೂಲಕ ಎಲ್ಲಾ ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳನ್ನು ಆಡಿದಂತಾಗುತ್ತದೆ. ಹಾಗಿದ್ದರೂ ಆಸ್ಟ್ರೇಲಿಯಾ ತಂಡದ ಓರ್ವ ಆಟಗಾರ ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರೂ ಇನ್ನೂ ಭಾರತಕ್ಕೆ ಆಗಮಿಸಿಲ್ಲ. ತವರಿನಲ್ಲಿಯೇ ಉಳಿದಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರೇ ಬಹಿರಂಗಪಡಿಸಿದ್ದಾರೆ.
ಅಂದಹಾಗೆ ವಿಶ್ವಕಪ್ ತಂಡದಲ್ಲಿದ್ದರೂ ಇನ್ನೂ ಭಾರತಕ್ಕೆ ಬಂದಿಳಿಯದ ಆ ಆಟಗಾರ ಬೇರೆ ಯಾರೂ ಅಲ್ಲ ಆಸ್ಟ್ರೇಲಿಯಾ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಟ್ರಾವಿಸ್ ಹೆಡ್. ಆಕ್ರಮಣಕಾರಿ ಆಟಕ್ಕೆ ಹೆಸರಾಗಿರುವ ಈ ಆಟಗಾರ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ತವರಿನಲ್ಲಿಯೇ ಇದ್ದು ಚೇತರಿಕೆ ಕಾಣುತ್ತಿದ್ದಾರೆ ಎಂದು ಸ್ವತಃ ಆಸೊಸ್ ನಾಯಕ ಪ್ಯಾಟ್ ಕಮ್ಮಿನ್ಸ್ ವಿವರಿಸಿದ್ದಾರೆ.

ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ವೇಳೆ ಹೆಡ್ ಅವರಿಗೆ ಈ ಗಾಯವಾಗಿತ್ತು. ವಿಶ್ವಕಪ್‌ನ ಮೊದಲಾರ್ಧದಲ್ಲಿ ಅವರನ್ನು ಹೊರಗಿಡುವಷ್ಟು ಗಾಯ ತೀವ್ರತೆ ಪಡೆದುಕೊಂಡಿದೆ. ಈ ಹಿನ್ನಡೆಯ ಹೊರತಾಗಿಯೂ ಆಸ್ಟ್ರೇಲಿಯಾ ತಂಡ ಹೆಡ್ ಅವರನ್ನು ತಮ್ಮ 15 ಸದಸ್ಯರ ತಂಡದಲ್ಲಿ ಸೇರಿಸಿಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಸಾಧ್ಯವಾದಷ್ಟು ಶೀಘ್ರವಾಗಿ ಚೇತರಿಸಿಕೊಂಡು ತಂಡಕ್ಕೆ ಮರಳಲಿ ಎಂದು ಆಶಿಸುತ್ತಿದ್ದಾರೆ.
ಟಾಸ್ ಗೆದ್ದ ಸಂದರ್ಭದಲ್ಲಿ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಟಾಸ್ ಗೆದ್ದ ಆಸಿಸ್ ನಾಯಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಭ್ಯಾಸ ಪಂದ್ಯಗಳ ಬಳಿಕ ಆಸ್ಟ್ರೇಲಿಯಾ ತಂಡ ಉತ್ತಮ ಲಯದಲ್ಲಿದೆ ಎಂದಿದ್ದಾರೆ ಈ ಸಂದರ್ಭದಲ್ಲಿ ಟ್ರಾವಿಸ್ ಹೆಡ್ ಅವರು ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಖಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್