ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯ ಗುರುವಾರ ನಾಗ್ಪುರದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತದ ಪರ ಇಬ್ಬರು ಆಟಗಾರರು ಪದಾರ್ಪಣೆ ಮಾಡಲಿದ್ದಾರೆ. ಈ ಇಬ್ಬರು ಆಟಗಾರರು ಈಗಾಗಲೇ ಭಾರತದ ಪರ ಆಡಿ ಸೈ ಎನಿಸಿಕೊಂಡಿದ್ದಾರೆ. ಇದರಲ್ಲಿ ಒಬ್ಬರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್‌ನಲ್ಲೂ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಈಗ ಇವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದು, ಯಶಸ್ವಿ ಜೈಸ್ವಾಲ್ ಕನಸು ನನಸಾಗಿದೆ.
ಇನ್ನು ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧ ಶಿವಂ ದುಬೆ ವಿರುದ್ಧದ ಟಿ20 ಪಂದ್ಯದಲ್ಲಿ ಶಿವಂ ದುಬೆ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗದ ಬೌಲರ್ ಹರ್ಷಿತ್ ರಾಣಾ ಅವರಿಗೂ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಇವರು ಮೊಹಮ್ಮದ್ ಶಮಿ ಅವರೊಂದಿಗೆ ವೇಗದ ಬೌಲಿಂಗ್ ನೊಗವನ್ನು ಹೊರಲಿದ್ದಾರೆ. ಒಂದೇ ಪಂದ್ಯದಲ್ಲಿ ಭಾರತದ ಪರ ಇಬ್ಬರು ಯುವ ಆಟಗಾರರು ಪಂದ್ಯದಲ್ಲಿ ಪದಾರ್ಪಣೆ ಮಾಡುವುದು ವಿಶೇಷ.

ಟೀಮ್ ಇಂಡಿಯಾದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಯಶಸ್ವಿ ಜೈಸ್ವಾಲ್ ಅವರ ಕನಸು ನನಸಾಗಿದೆ. ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರಿಂದ ಇವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ಇವರು ಯಾವ ಸ್ಥಾನದಲ್ಲಿ ಬ್ಯಾಟ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇವರಿಗೆ ಏಕದಿನ ಕ್ರಿಕೆಟ್ ಕ್ಯಾಪ್ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ನೀಡಿ ಗೌರವಿಸಿದ್ದಾರೆ.
ಈಗಾಗಲೇ ಹರ್ಷಿತ್ ರಾಣಾ ಟೆಸ್ಟ್ ಪರ ಪದಾರ್ಪಣೆ ಮಾಡಿದ್ದರು. ಅಲ್ಲದೆ ಇವರು ಭಾರತದ ಪರ ಟಿ20 ಕ್ರಿಕೆಟ್‌ಗೂ ಚೊಚ್ಚಲ ಪ್ರವೇಶ ಪಡೆದಿದ್ದರು. ಇನ್ನು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಅವಕಾಶ ಸಿಕ್ಕಿದೆ. ಇನ್ನು ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಹರ್ಷಿತ್ ಆಡಿರುವ 21 ಪಂದ್ಯಗಳಲ್ಲಿ 25 ವಿಕೆಟ್ ಪಡೆದಿದ್ದಾರೆ. ಇವರ ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ತಂಡದಲ್ಲಿ ಸ್ಥಾನ ಲಭಿಸಿದೆ.
ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾ ಪರ ಈಗಾಗಲೇ ಟಿ20 ಕ್ರಿಕೆಟ್ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಟ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇವರು ಆಡಿದ 19 ಟೆಸ್ಟ್ ಪಂದ್ಯಗಳಲ್ಲಿ 4 ಶತಕ, 10 ಅರ್ಧಶತಕಗಳ ಬಲದಿಂದ 1798 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 52.88 ಆಗಿದೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ ಜೈಸ್ವಾಲ್ ಆಡಿದ 23 ಪಂದ್ಯಗಳಲ್ಲಿ 1 ಶತಕ ಹಾಗೂ 5 ಅರ್ಧಶತಕದ ಸಹಾಯದಿಂದ 723 ರನ್ ಕಲೆ ಹಾಕಿದ್ದಾರೆ. 23 ವರ್ಷದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಕನಸು ನನಸಾಗಿದೆ.