ಏಷ್ಯನ್ ಗೇಮ್ಸ್ ಪದಕ ವಿಜೇತರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ; ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಭರವಸೆ
ಬೆಂಗಳೂರು, ಅಕ್ಟೋಬರ್ 18: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇತ್ತೀಚೆಗೆ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಸಿಎಂ ಸಿದ್ದರಾಮಯ್ಯ ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಭರವಸೆ ನೀಡಿದರು.

"ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದು ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿರುವುದಕ್ಕೆ," ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
"ಇಡೀ ಜಗತ್ತಿನ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ," ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

"ಕ್ರೀಡೆಗೆ ಮತ್ತು ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು," ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
"ಈಗ ನಮ್ಮ ರಾಜ್ಯದಿಂದ 8 ಕ್ರೀಡಾಪಟುಗಳು ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ರಾಜ್ಯದ ಏಳು ಕೋಟಿ ಕನ್ನಡಿಗರ ವತಿಯಿಂದ ಅವರಿಗೆ ಅಭಿನಂದನೆಗಳು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಒಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ," ಎಂದು ಶುಭ ಹಾರೈಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು, ನಸೀರ್ ಅಹ್ಮದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳು
ರಾಜೇಶ್ವರಿ ಗಾಯಕ್ವಾಡ್ (ಕ್ರಿಕೆಟ್- ಚಿನ್ನ), ರೋಹನ್ ಬೋಪಣ್ಣ (ಟೆನ್ನಿಸ್- ಮಿಕ್ಸ್‌ಡ್ ಡಬಲ್ಸ್- ಚಿನ್ನ), ಮಿಜೋ ಚಾಕೋ ಕುರಿಯನ್, ನಿಹಾಲ್ ಜೋಯಲ್ (ಅಥ್ಲೆಟಿಕ್ಸ್ ಪುರುಷರ 4x400 ಮೀಟರ್ ರಿಲೇ -ಕಾಯ್ದಿರಿಸಿದ ಕ್ರೀಡಾಪಟು- ಚಿನ್ನ), ಮಿಥುನ್ ಮಂಜುನಾಥ್ (ಪುರುಷರ ಬ್ಯಾಡ್ಮಿಂಟನ್ - ಬೆಳ್ಳಿ), ಸಾಯಿ ಪ್ರತೀಕ್ (ಪುರುಷರ ಬ್ಯಾಡ್ಮಿಂಟನ್ - ಬೆಳ್ಳಿ), ದಿವ್ಯಾ (ಶೂಟಿಂಗ್ - ಎರಡು ಬೆಳ್ಳಿ ಪದಕ).
ಏಷ್ಯನ್ ಗೇಮ್ಸ್ ಕರ್ನಾಟಕದ ತರಬೇತುದಾರರು
ವಿ.ತೇಜಸ್ವಿನಿ ಬಾಯಿ (ಕಬಡ್ಡಿ - ಚಿನ್ನ), ಅಂಕಿತ ಬಿ.ಎಸ್ (ಹಾಕಿ- ಕಂಚು), ಸಿ.ಎ ಕುಟ್ಟಪ್ಪ (ಬಾಕ್ಸಿಂಗ್ ಮುಖ್ಯ ತರಬೇತುದಾರ - 1 ಬೆಳ್ಳಿ ಮತ್ತು 4 ಕಂಚು) ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಸನ್ಮಾನ ಮಾಡಿ, ನಗದು ಪುರಸ್ಕಾರ ಪ್ರದಾನ ಮಾಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications