ಶುಕ್ರವಾರ, ಜೂನ್ 2ರಂದು ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಕುರಿತು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಇದರ ಪರಿಣಾಮವಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

"ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅವರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಇನ್ನು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ," ಎಂದು ವಿರಾಟ್ ಕೊಹ್ಲಿ ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್‌ನಲ್ಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಜೂನ್ 7ರಿಂದ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಡಲಿದ್ದಾರೆ.
ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಪ್ರಕಾರ, ಒಂದು ಗೂಡ್ಸ್ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ. ಶುಕ್ರವಾರ 12864 ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಬಾಲೇಶ್ವರ ಬಳಿ ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳಿತಪ್ಪಿದ ಈ ಬೋಗಿಗಳು ಪಕ್ಕದ ಹಳಿಯಲ್ಲಿ ಬಿದ್ದು 12841 ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ.

ಹಳಿತಪ್ಪಿದ ಬೋಗಿಗಳಲ್ಲಿ ಸಿಲುಕಿರುವ ಜನರನ್ನು ಹೊರತೆಗೆಯಲು ಬಾಲಸೋರ್ ಬಳಿಯ ಬಹನಾಗಾ ಬಜಾರ್‌ನ ಅಪಘಾತ ಸಂಭವಿಸಿದ ಸ್ಥಳದಲ್ಲಿ ಶುಕ್ರವಾರ ರಾತ್ರಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಸದ್ಯ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ 3 NDRF, 4 ODRAF ಮತ್ತು 22 ಅಗ್ನಿಶಾಮಕ ಸೇವೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರೈಲು ಅಪಘಾತವು ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಸಂಭವಿಸಿದ ಅತ್ಯಂತ ಮಾರಣಾಂತಿಕ ರೈಲು ಅಪಘಾತಗಳಲ್ಲಿ ಒಂದಾಗಿದೆ.
ಈ ರೈಲು ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿಗಳನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.
ಇನ್ನು ರೈಲ್ವೇ ಸಚಿವಾಲಯವು ಈ ರೈಲು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದೆ. ಅಪಘಾತದ ಬಗ್ಗೆ ಆದಷ್ಟು ಬೇಗ ತನಿಖೆ ನಡೆಸುವಂತೆ ರೈಲ್ವೆ ಸುರಕ್ಷತಾ ಆಯುಕ್ತರು, ಸೌತ್ ಈಸ್ಟ್ ಸರ್ಕಲ್ ಅವರಿಗೆ ಸೂಚಿಸಲಾಗಿದೆ.